Belagavi-ಮಾರ್ಚ್- 7 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ-ZP CEO ರಾಹುಲ್ ಶಿಂಧೆ ಹೇಳಿಕೆ
ಮಾರ್ಚ್- 7 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ
*ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ರಾಹುಲ್ ಶಿಂಧೆ*
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಲ್ಲಿನ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ರವರು ಚಾಲನೆ ನೀಡಲಿದ್ದಾರೆ. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಪ್ (ರಾಜು) ಶೇಟ್ ಅಧ್ಯಕ್ಷತೆ ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
*100ಕ್ಕೂ ಹೆಚ್ಚು ಕಂಪನಿಗಳು:*
ಉದ್ಯೋಗ ಮೇಳದಲ್ಲಿ ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರು ನಗರಗಳಿಂದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ. ಎಸ್.ಎಸ್.ಎಲ್.ಸಿ., ಪಿಯಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇನ್ನಿತರ ಶಿಕ್ಷಣ ಪೂರೈಸಿರುವ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಉದ್ಯೋಗಗಳನ್ನು ಪಡೆದುಕೊಳ್ಳಬೇಕು ಹಾಗೂ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ.
0 Comments: